ಕಾನ್ಪುರ: ಉಪನ್ಯಾಸ ನೀಡುತ್ತಿರುವಾಗಲೇ ಪ್ರಾಧ್ಯಾಪಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಐಐಟಿ ಕಾನ್ಪುರದಲ್ಲಿ ನಡೆದಿದೆ. ಹಳೇ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ಸಂಭವಿಸಿದೆ.
ಸಮೀರ್ ಖಂಡೇಕರ್ (53) ಮೃತರು. ಇವರು ಐಐಟಿ ಕಾನ್ಪುರದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದರು.
ಹಳೆಯ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಐದು ವರ್ಷಗಳ ಹಿಂದೆ ಖಂಡೇಕರ್ ಅವರಿಗೆ ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿರುವುದು ಪತ್ತೆಯಾಗಿತ್ತು. ಅದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ. ಇತ್ತೀಚಿನ ಅವರ ಆರೋಗ್ಯದ ಸ್ಥಿತಿಗತಿ ಪರಿಶೀಲಿಸಿದಾಗ ಅವರು ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.