ಪಾಂಡವಪುರ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾವ ಪಕ್ಷಕ್ಕೆ ಮಂಡ್ಯ ಕ್ಷೇತ್ರದ ಸೀಟು ಟಿಕೆಟ್ ಸಿಕ್ಕರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಹೇಳಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಈ ಬಾರಿ ಸ್ಪರ್ಧಿಸಲಿದ್ದಾರೆಂದು ಸುಳಿವು ನೀಡಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಮಟ್ಟದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ಉದ್ದೇಶದಿಂದ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ಅಸ್ಥಿರವಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ನ ಹಲವು ಶಾಸಕರು, ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಹಿಂದೂ ವಿರೋಧಿಯಾಗಿದೆ. ಬಿಜೆಪಿ ಪಕ್ಷಕ್ಕೆ ರಾಜಕೀಯಕ್ಕಿಂತ ದೇಶವೇ ಮುಖ್ಯ. ದೇಶದ ಸಂರಕ್ಷಣೆಗಾಗಿ ಬಿಜೆಪಿ ಪಕ್ಷದಿಂದ ಸದಾ ಹೋರಾಟ ನಡೆಯಲಿದೆ. ಹಾಗಾಗಿ ಜನತೆ ದೇಶದ ರಕ್ಷಣೆಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.