ಬೆಂಗಳೂರು: ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 2022ರಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡುವ ಮೂಲಕ ಸಾರ್ವಜನಿಕರಿಗೆ ಅಡ್ಡಿ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ಸಿದ್ದರಾಮಯ್ಯ ಮತ್ತು ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.
ಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಪಿಎಸ್ಐ ಕು.ಜಹಿದಾ ಅವರನ್ನು ಪ್ರತಿವಾದಿಯಾಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ತಲಾ 10 ಸಾವಿರ ರೂ ದಂಡ ವಿಧಿಸಲಾಗಿದೆ. ಈ ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮೆ ಮಾಡಬೇಕು ಎಂದು ನ್ಯಾಯಪೀಠ ಇದೇ ವೇಳೆ ತಿಳಿಸಿದೆ.