ಡಿಕೆಶಿ ವಿರುದ್ಧ ತನಿಖೆಗೆ ಸಿಬಿಐ ಅನುಮತಿ ಹಿಂಪಡೆದ ಪ್ರಕರಣ: ವಿಚಾರಣೆ ಮುಂದೂಡಿದ ನ್ಯಾಯಾಲಯ

Prasthutha|

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ 29ಕ್ಕೆ ಮುಂದೂಡಿದೆ.

- Advertisement -

ಡಿಕೆಶಿ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ಮಧ್ಯೆ, ಲೋಕಾಯುಕ್ತ ಎಡಿಜಿಪಿ ಮಧ್ಯಪ್ರವೇಶಕ್ಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್ ಅರಬಟ್ಟಿಗೆ ನೋಟಿಸ್ ಪಡೆಯಲು ಸೂಚಿಸಲಾಗಿದೆ.

- Advertisement -

ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿಗೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಲು ನ್ಯಾಯಾಲಯ ಸೂಚಿಸಿದೆ. ಆಕ್ಷೇಪಣೆ, ಪ್ರತ್ಯುತ್ತರ ಸಲ್ಲಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಿದೆ.



Join Whatsapp