ಬೆಂಗಳೂರು: ರಾಜ್ಯದಾದ್ಯಂತ ಮತ್ತು ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗ ನೀಡಿರುವ ಕನ್ನಡಿಗರ ಸಂಖ್ಯೆಯನ್ನು ಕಚೇರಿಯ ಆವರಣದ ನೋಟಿಸ್ ಬೋರ್ಡ್ ನಲ್ಲಿ ಪ್ರದರ್ಶಿಸಲು ಸೂಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕದ ಮೇಲೆ ನಡೆದ ಚರ್ಚೆಯ ಸಂದರ್ಭ ಅವರು ಮಾತನಾಡಿದರು.
ಕನ್ನಡ ಭಾಷೆಯ ರಕ್ಷಣೆ ಮತ್ತು ಪ್ರಾಧಾನ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಸದನಕ್ಕೆ ಸಚಿವರು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಬಹುರಾಷ್ಟ್ರೀಯ ಕಂಪನಿಗಳು ಸಾಕಷ್ಟು ಸಂಖ್ಯೆಯ ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಖಚಿತಪಡಿಸಿಕೊಳ್ಳಲು, ವಿವರಗಳನ್ನು ಪ್ರದರ್ಶಿಸಲು ಸರ್ಕಾರವು ಸೂಚಿಸಲಿದೆ ಎಂದು ಅವರು ಹೇಳಿದ್ದಾರೆ.