ಬಂಗಾಳದಲ್ಲಿ 8 ಹಂತದ ಚುನಾವಣೆ | ಚುನಾವಣಾ ಆಯೋಗದ ವಿರುದ್ಧ ಮಮತಾ ಆಕ್ರೋಶ

Prasthutha|

ಕೊಲ್ಕತಾ : ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಅದರಲ್ಲಿ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳ ಚುನಾವಣೆ ನಡೆಸುತ್ತಿರುವುದಕ್ಕೆ ಅಲ್ಲಿನ ಸಿಎಂ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -

ವಿಷಯಕ್ಕೆ ಸಂಬಂಧಿಸಿ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಚುನಾವಣಾ ಪ್ರಚಾರದ ಉತ್ತಮ ನಿರ್ವಹಣೆಗಾಗಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಲಹೆಯಂತೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ ಎಂದು ಮಮತಾ ಬ್ಯಾನರ್ಜಿ ಆಪಾದಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ಎಲ್ಲಾ ರೀತಿಯ ಗೌರವವನ್ನು ಸಲ್ಲಿಸುತ್ತಾ ಹೇಳಬಯಸುವುದೇನೆಂದರೆ, ದೇಶದ ಇತರೆ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಬಂಗಾಳದಲ್ಲಿ ಮಾತ್ರ ಹಲವು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವುದು ಪ್ರಶ್ನಾರ್ಥಕವಾಗಿದೆ. ಚುನಾವಣಾ ಆಯೋಗವೇ ನ್ಯಾಯ ಒದಗಿಸದಿದ್ದರೆ ಜನರು ಇನ್ನೆಲ್ಲಿಗೆ ಹೋಗುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -

ಬಿಜೆಪಿಯ ಎಲ್ಲಾ ಕುತಂತ್ರಗಳ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

Join Whatsapp