ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ವಿಶೇಷ ತನಿಖಾ ತಂಡದ (ಎಸ್ ಐಟಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಅವರು ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು.
ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.