ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಎಲ್‌ಇಡಿ ಬಲ್ಬ್ ಅಳವಡಿಸುವುದನ್ನು ನಿಷೇಧ ಮಾಡಲಾಗಿದೆ. ಜುಲೈ ತಿಂಗಳಿಂದ ಈ ಬಗ್ಗೆ ಕಟ್ಟುನಿಟ್ಟಾಗಿ ತಪಾಸಣೆ ಮಾಡಲಾಗುತ್ತದೆ ಮತ್ತು ನಿಯಮ ಉಲ್ಲಂಘನೆ ಕಂಡುಬಂದರೆ ಕೇಸ್ ದಾಖಲಿಸುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ಭಾರಿ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿದ್ದಾರೆ. ಇದರಿಂದ ಇತರೆ ಚಾಲಕರಿಗೆ ವಾಹನ ಚಲಾಯಿಸಲು ತೊಂದರೆ ಉಂಟಾಗುತ್ತಿದೆ. ಆದರಿಂದ ವಾಹನ ಮಾಲೀಕರು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲನೆ ಮಾಡಬೇಕು.
ಇಲ್ಲವಾದರೆ ಸವಾರ, ಚಾಲಕರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಜುಲೈನಿಂದ ಎಲ್‌ಇಡಿ ಬಲ್ಪ್ ಅಳವಡಿಸಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಜುಲೈ 31ಕ್ಕೆ ವರದಿ ಒಪ್ಪಿಸುವಂತೆ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.