ಚೆನ್ನೈ: ಇಲ್ಲಿಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿ ಹೊಸ ಇತಿಹಾಸ ನಿರ್ಮಿಸಿದೆ.
603 ರನ್ಗಳೊಂದಿಗೆ ಮಹಿಳಾ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಆಸ್ಟ್ರೇಲಿಯಾ ಮಹಿಳಾ ತಂಡದ ಹೆಸರಿನಲ್ಲಿತ್ತು.
2024 ರಲ್ಲಿ ಪರ್ತ್ನಲ್ಲಿ ನಡೆದ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 575 ರನ್ಗಳಿಸಿ ಈ ದಾಖಲೆ ಬರೆದಿತ್ತು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಮಹಿಳಾ ಟೆಸ್ಟ್ನಲ್ಲಿ 600+ ರನ್ ಕಲೆಹಾಕಿದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.
ಈ ಪಂದ್ಯದ ಮೊದಲ ದಿನದಾಟದಲ್ಲಿ 525 ರನ್ ಕಲೆಹಾಕಿದ್ದ ಭಾರತ ತಂಡವು ಎರಡನೇ ದಿನದಾಟದ ಮೊದಲ ಸೆಷನ್ನಲ್ಲೇ ಡಿಕ್ಲೇರ್ ಘೋಷಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 292 ರನ್ಗಳ ಜೊತೆಯಾಟವಾಡಿದ ಬಳಿಕ ಸ್ಮೃತಿ ಮಂಧಾನ ಔಟಾದರು.
161 ಎಸೆತಗಳನ್ನು ಎದುರಿಸಿದ್ದ ಸ್ಮೃತಿ ಮಂಧಾನ 1 ಸಿಕ್ಸ್ ಹಾಗೂ 27 ಫೋರ್ಗಳೊಂದಿಗೆ 149 ರನ್ ಬಾರಿಸಿದ್ದರು. ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಶಫಾಲಿ ವರ್ಮಾ 197 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 24 ಫೋರ್ಗಳೊಂದಿಗೆ 205 ರನ್ ಚಚ್ಚಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗವಾಗಿ ದ್ವಿಶತಕ ಬಾರಿಸಿದ ಆಟಗಾರ್ತಿ ಎನಿಸಿಕೊಂಡರು.
ಇನ್ನು ಆರಂಭಿಕರಿಬ್ಬರು ನಿರ್ಗಮನದ ಬಳಿಕ ಬಂದ ಜೆಮಿಮಾ ರೊಡ್ರಿಗಾಸ್ (55) ಹಾಗೂ ಹರ್ಮನ್ಪ್ರೀತ್ ಕೌರ್ (69) ಅರ್ಧಶತಕ ಬಾರಿಸಿ ಮಿಂಚಿದರು. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ 90 ಎಸೆತಗಳಲ್ಲಿ 16 ಫೋರ್ಗಳೊಂದಿಗೆ 86 ರನ್ ಚಚ್ಚಿದರು. ಈ ಮೂಲಕ ಟೀಮ್ ಇಂಡಿಯಾ 115.1 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 603 ರನ್ ಕಲೆಹಾಕಿ ಮೊದಲ ಇನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿದೆ.
ಪುರುಷರ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸ್ಕೋರ್ ಗಳಿಸಿದ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿದೆ.
1997 ರಲ್ಲಿ ಕೊಲಂಬೊದಲ್ಲಿ ನಡೆದ ಭಾರತದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು 952 ರನ್ ಪೇರಿಸಿ ಈ ವಿಶ್ವ ದಾಖಲೆ ಬರೆದಿದೆ.
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಭಾರತೀಯ ಪುರುಷರ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ 759 ರನ್ಗಳು. 2016 ರಲ್ಲಿ ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿ ಭಾರತ ತಂಡ ಈ ದಾಖಲೆ ಬರೆದಿದೆ.