ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಸಿಬಿಐಗೆ ಸೂಚಿಸಿದೆ.
ಜಾಮೀನು ಕೋರಿ ಕೇಜ್ರಿವಾಲ್ ಅವರು ಸಲ್ಲಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ಜಾಮೀನು ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದರು.
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ಎಎಪಿ ನಾಯಕ ಕೇಜ್ರಿವಾಲ್ ಫ್ಲೈಟ್ ರಿಸ್ಕ್ ಅಲ್ಲ ಮತ್ತು ಭಯೋತ್ಪಾದಕರೂ ಅಲ್ಲ. ಇಡಿ ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಸಿಬಿಐ ಅವರನ್ನು ಬಂಧಿಸಿದೆ ಎಂದು ಹೇಳಿದರು.