ಮಂಗಳೂರು‌ | ಚಡ್ಡಿ ಗ್ಯಾಂಗ್‌ಗೆ ಖೆಡ್ಡಾ ತೋಡಿದ ಪೊಲೀಸರು: ನಾಲ್ವರು ವಶಕ್ಕೆ

Prasthutha|

ಮಂಗಳೂರು: ನಗರದಲ್ಲಿ ಸಕ್ರಿಯವಾಗಿ ಕಳ್ಳತನ ನಡೆಸುತ್ತಿದ್ದ ‘ಚಡ್ಡಿ ಗ್ಯಾಂಗ್’ ಎಂದು ಕುಪ್ರಸಿದ್ಧ ಪಡೆದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ‌‌.

- Advertisement -

ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಸದರಿ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಗುಮಾನಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿ, ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು, ಅವರ ಮಾಹಿತಿಯಂತೆ ಸದರಿ ಸಮಯ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು, ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಗಿ, ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದು, ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ ಎಂದು ನಗರ ಪೊಲೀಸರ ಪ್ರಕಟಣೆ ತಿಳಿಸಿದೆ.

- Advertisement -

ಮಂಗಳೂರು ನಗರ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 09-07-2024ರಂದು ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦೦೦/- ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದು, ಈ ಬಗ್ಗೆ ಶ್ರೀಮತಿ ಪ್ಯಾಟ್ರ್ರಿಸಿಯಾ ಮೆಂಡೊನ್ಸಾ ರವರು ನೀಡಿದ ದೂರಿನಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 7-೦೦ ಗಂಟೆಗೆ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ ಆರೋಪಿಗಳ ವಿವರ:

1) ರಾಜು ಸಿಂಗ್ವಾನಿಯ (24 ವರ್ಷ), ತಂದೆ: ಕೋಮಲ್ ಸಿಂಗ್ವಾನಿಯ, ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ

2) ಮಯೂರ್ (30 ವರ್ಷ), ತಂದೆ: ಮನೋಹರ್, ವಾ: ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ

3) ಬಾಲಿ (22 ವರ್ಷ), ತಂದೆ: ವಿಷ್ಣು, ವಾಸ: ಮಾಧವ್ಗಡ್, ಆಶೋಕನಗರ, ಮಧ್ಯ ಪ್ರದೇಶ

4) ವಿಕ್ಕಿ (21 ವರ್ಷ), ತಂದೆ: ವಿಕ್ರಂ, ವಾಸ: ಜಗನ್ಪುರ್ ಚಾಕ್, ಕೋತ್ವಾಲಿ ಪಿ.ಎಸ್, ಗುಣಾ ಜಿಲ್ಲೆ, ಮಧ್ಯ ಪ್ರದೇಶ

ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು,
ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ಕಾರ್ಯಾಚರಣೆಯಲ್ಲಿದ್ದರು. ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಯಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಯಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಸಹಕರಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ



Join Whatsapp