ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯು ಟರ್ನ್ ಸರ್ಕಾರ ಎಂದ ವಿಜಯೇಂದ್ರ

Prasthutha|

ಬೆಂಗಳೂರು: ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆ ವಿಚಾರವಾಗಿ ಹಲವು ಬಾರಿ ಗೊಂದಲದ ಸಂದೇಶಗಳನ್ನು ಪ್ರಕಟಿಸಿ ಕೊನೆಗೆ ತಡೆಹಿಡಿರುವ ಬಗ್ಗೆ ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಇದು ‘ಯು ಟರ್ನ್ ಸರ್ಕಾರ’ ಎಂದು ಕಿಡಿಕಾರಿದ್ದಾರೆ.

ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

- Advertisement -

ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ. ‘ಇಂಡಿ’ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.



Join Whatsapp