ಡಿಕೆಶಿ ಗೆ ಬಿಗ್ ರಿಲೀಫ್ | 3 ತೆರಿಗೆ ವಂಚನೆ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

Prasthutha|

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಮೂರು ಕ್ರಿಮಿನಲ್‌ ಮರು ಪರಿಶೀಲನಾ ಅರ್ಜಿಗಳನ್ನು ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

- Advertisement -

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಕೂಡ ಡಿಕೆಶಿ ವಿರುದ್ಧದ ತೆರಿಗೆ ವಂಚನೆ ಆರೋಪವನ್ನು ಕೈ ಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಹೈಕೋರ್ಟ್‌ ಕದ ತಟ್ಟಿತ್ತು. ಐಟಿ ಇಲಾಖೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹಾ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಆ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2019ರ ಫೆ.28ರಂದು ಹೊರಡಿಸಿದ್ದ ಆದೇಶ ಊರ್ಜಿತವಾಗಿದ್ದು ಡಿಕೆಶಿಗೆ ನಿರಾಳತೆ ತಂದಿದೆ.

ಐಟಿ ಇಲಾಖೆಯು 2017ರ ಆಗಸ್ಟ್‌ ತಿಂಗಳಲ್ಲಿ ಡಿ.ಕೆ. ಶಿವಕುಮಾರ್‌, ಅವರ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ಪ್ರಕರಣದ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಿಸಿದ್ದ ಆದಾಯ ತೆರಿಗೆ ಇಲಾಖೆ, ಡಿ.ಕೆ.ಶಿವಕುಮಾರ್‌ ಮತ್ತು ಸ್ನೇಹಿತರು ಹಾಗೂ ಸಂಬಂಧಿಕರಿಗೆ ಸೇರಿದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿ 300 ಕೋಟಿ ರೂ.ಗೂ ಅಧಿಕ ಅಕ್ರಮ ಆಸ್ತಿ ಮೌಲ್ಯ ಪತ್ತೆ ಮಾಡಿ, 2016, 2017 ಮತ್ತು 2018ನೇ ಸಾಲಿನಲ್ಲಿ ತೆರಿಗೆ ವಂಚಿಸಿದ್ದಾರೆಂದು ಆರೋಪಿಸಿತ್ತು.

- Advertisement -

ಇದೇ ಪ್ರಕರಣದ ಸಂಬಂಧ ಈಗಲ್ಟನ್‌ ರೆಸಾರ್ಟ್‌ನಲ್ಲಿ ಪರಿಶೋಧನೆಗೆ ಹೋದ ವೇಳೆ ಅಲ್ಲಿದ್ದ ಡಿ.ಕೆ. ಶಿವಕುಮಾರ್‌, ಐಟಿ ಅಧಿಕಾರಿಗಳನ್ನು ನೋಡಿದ ಕೂಡಲೇ ತನ್ನ ಜೇಬಿನಲ್ಲಿದ್ದ ಚೀಟಿ ಹರಿದು ಹಾಕಿದ್ದರು ಎಂದು ಆರೋಪಿಸಿತ್ತು. ಅಲ್ಲದೆ, ಶಿವಕುಮಾರ್‌ ತಮ್ಮ ಬೇನಾಮಿ ವ್ಯಕ್ತಿಗಳ ಮೂಲಕ ಕೋಟ್ಯಂತರ ಹಣವನ್ನು ಅಕ್ರಮ ವರ್ಗಾವಣೆ ಮಾಡಿದ್ದಾರೆ. ತೆರಿಗೆ ವಂಚನೆ ಮಾಡಿದ್ದು, ಚೀಟಿ ಹರಿದು ಹಾಕಿದ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಜತೆಗೆ, ಸಾಕ್ಷ್ಯ ನಾಶ ಮಾಡಿದ್ದಾರೆಂದು ಆರೋಪಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು.

ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಕೋರಿ ಡಿ.ಕೆ. ಶಿವಕುಮಾರ್‌, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಪುರಸ್ಕರಿಸಿದ್ದ ವಿಶೇಷ ನ್ಯಾಯಾಲಯ, ಡಿ.ಕೆ. ಶಿವಕುಮಾರ್‌ ವಿರುದ್ಧದ ಆರೋಪಗಳನ್ನು ಕೈಬಿಟ್ಟು 2019ರ ಫೆ.28ರಂದು ಆದೇಶಿಸಿತ್ತು.



Join Whatsapp