ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.
ಸಾಮಾಜಿಕ – ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.
ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ರೆಹಮತ್ ಸೇರಿದಂತೆ, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಐಬ್, ಸತ್ತಾರ್ ಅವರ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮುಮ್ತಾಝ್ ಅಲಿ ಅವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರ ಹೈದರ್ ಅಲಿ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.