ಶಿವಮೊಗ್ಗ (ಅ.27): ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್ ಪೊಲೀಸರಿಗೆ ತಾಕೀತು ಮಾಡಿದರು.
ನಗರದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿದ ಬಳಿಕ ಶಿವಮೊಗ್ಗ ಜಿಲ್ಲಾ ವಿಮರ್ಶನಾ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮಕ್ಕಳ ಓದಿಗಾಗಿ ಗ್ರಂಥಾಲಯಗಳಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವರಿಗೆ ವಿವಿಧ ವಿಷಯಗಳ ಅವಶ್ಯಕ ಪುಸ್ತಕಗಳನ್ನು ಒದಗಿಸಿ. ಪೊಲೀಸ್ ಇಲಾಖೆ ಸರ್ಕಾರದ ಮುಖ. ಅಧಿಕಾರಿ ಮತ್ತು ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡಿ, ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ತಂದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಇಲಾಖೆಯ ಮೇಲೆ ಹೆಚ್ಚು ಜವಾಬ್ಧಾರಿ ಇದೆ ಎಂದು ತಿಳಿಸಿದರು.ಬಡವರ ಪರ ಸರ್ಕಾರ ನಮ್ಮದು. ಸಮಾಜದಲ್ಲಿ ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲಸವಾಗಬೇಕು. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿ, ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕು ಎಂದರು.
ಕೊಪ್ಪಳದಲ್ಲಿ ನಡೆದಿದ್ದ ಘಟನೆಯಲ್ಲಿ ಒಂದೇ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯಾಗಿರುವ ಪ್ರಕರಣವನ್ನು ಮಾದರಿಯಾಗಿ ತೆಗೆದುಕೊಂಡು ಕರ್ತವ್ಯನಿರ್ವಹಿಸಿ ಎಂದರು. ಬಹುತೇಕ ಪ್ರಕರಣಗಳು ಬಂದಾಗ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಪೊಲೀಸರು ದೂರುಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಿತಿದಿನ ಸಾರ್ವಜನಿಕರು ನನ್ನ ಬಳಿಗೆ ದೂರು ತೆಗೆದುಕೊಂಡು ಬರುತ್ತಿದ್ದಾರೆ. ಇದು ಮುಂದುವರಿದರೆ ಸಹಿಸುವುದಿಲ್ಲ. ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಆಲಿಸಿ, ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.