ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ?: ಡಿಕೆ ಶಿವಕುಮಾರ್​ ಸುಳಿವು

Prasthutha|

- Advertisement -

ಬೆಂಗಳೂರು: ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು, ಜಾರಿಗೆ ಬಂದು ಒಂದು ವರ್ಷ ಕಳೆದಿದೆ.

ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ಉಚಿತ ಟಿಕೆಟ್​ ಪಡೆದು ಸಂಚರಿಸುತ್ತಿದ್ದಾರೆ.

- Advertisement -

ಆದರೆ, ಶಕ್ತಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಶಕ್ತಿ ಯೋಜನೆ ಮುಂದುವರೆಸುವ ವಿಚಾರವಾಗಿ ಮರುಪರಿಶೀಲನೆ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ವೋಲ್ವೋ ಬಸ್​ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ ನಡೆಸುವಂತೆ ಸ್ತ್ರೀಯರಿಂದಲೇ ಒತ್ತಡವಿದೆ. ಅನೇಕ ಹೆಣ್ಣುಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವಂತಹ ಶಕ್ತಿಯಿದೆ. ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ನಮಗೆ ಉಚಿತ ಪ್ರಯಾಣ ಬೇಡವೆಂದಿದ್ದಾರೆ. ಟ್ವೀಟ್, ಇ-ಮೇಲ್ ಮೂಲಕ ಅನೇಕ ಮಹಿಳೆಯರು ತಿಳಿಸುತ್ತಿದ್ದಾರೆ ಎಂದು ತಿಳಿಸಿದರು.

ಅನುಕೂಲ ಸ್ಥಿತಿಯಲ್ಲಿರುವ ಶೇಕಡಾ 5-10ರಷ್ಟು ಹೆಣ್ಣುಮಕ್ಕಳು ಹೇಳುತ್ತಿದ್ದಾರೆ. ನಾವು ಹಣ ನೀಡಿ ಟಿಕೆಟ್ ಪಡೆಯಲು ಮುಂದಾದರೂ ತೆಗೆದುಕೊಳ್ಳುತ್ತಿಲ್ಲ. ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ನಿರ್ವಾಹಕರು ಹಣ ಪಡೆದು ಟಿಕೆಟ್ ನೀಡುತ್ತಿಲ್ಲ ಅಂತ ಮಹಿಳೆಯರು ನಮಗೆ ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆ ಮರುಪರಿಶೀಲನೆ ಬಗ್ಗೆ ಚರ್ಚೆ ಮಾಡುತ್ತೇವೆ. ​ಇದರ ಬಗ್ಗೆ ಶೀಘ್ರದಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಸಭೆ ಮಾಡತ್ತೇವೆ. ಪ್ರತ್ಯೇಕವಾಗಿ ಸಭೆ ನಡೆಸಿ ಶಕ್ತಿ ಯೋಜನೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.




Join Whatsapp