ಕೇರಳ: ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಪಿಐ(ಎಂ) ನಾಯಕಿ, ಕಣ್ಣೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಪಿಪಿ ದಿವ್ಯಾ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಜಾಮೀನು ಅರ್ಜಿಯನ್ನು ತಲಶ್ಶೇರಿ ಸೆಷನ್ಸ್ ನ್ಯಾಯಾಲಯ ಇಂದು ಸ್ವೀಕರಿಸಿದೆ. ಅ. 29ರಂದು ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆ ಬಳಿಕ ದಿವ್ಯಾ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಅಕ್ಟೋಬರ್ 15ರಂದು ಸಿಪಿಎಂ ನಾಯಕಿ ದಿವ್ಯಾ ಅವರು ಸಾರ್ವಜನಿಕವಾಗಿ ಅವಹೇಳನಾಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ, ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು (55) ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಕಣ್ಣೂರು ಜಿಲ್ಲೆಯ ಪಂಚಾಯಿತಿ ಅಧ್ಯಕ್ಷೆ ಮತ್ತು ಸಿಪಿಎಂ ನಾಯಕಿ ಪಿ.ಪಿ.ದಿವ್ಯಾ ಅವರು ಕಾರ್ಯಕ್ರಮವೊಂದರಲ್ಲಿ ಬಾಬು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಬಾಬು ಅವರನ್ನು ಭ್ರಷ್ಟ ಎಂದು ಕರೆದಿದ್ದರು.
ಬಾಬು ಅವರ ನಿಧನದ ಬೆನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ದಿವ್ಯಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.