ಹೊಸದಿಲ್ಲಿ : ಉತ್ತರಪ್ರದೇಶದಲ್ಲಿ ಕೋವಿಡ್ ಸಂತ್ರಸ್ತರ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಉತ್ತರಪ್ರದೇಶ ಸರಕಾರ ಆಸ್ಪತ್ರೆಗಳ ಬದಲು ಸ್ಮಶಾನಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಮುಖಂಡರೊಂದಿಗೆ ನಡೆಸಿದ ತುರ್ತು ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಎಲ್ಲಾ ಭಾಗಗಳಿಂದಲೂ ಬರುತ್ತಿರುವ ಸುದ್ದಿಗಳು ದುಃಖಕರ ಮತ್ತು ಆಘಾತಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಎಲ್ಲ ರೀತಿಯ ವಿಪತ್ತಿನಿಂದ ರಕ್ಷಿಸಲು ಕಾಂಗ್ರೆಸ್ ಜನರ ಜೊತೆ ನಿಲ್ಲಲಿದೆ. ಕೊರೋನಾ ವೈರಸ್ ಸೋಂಕಿಗೆ ಒಳಗಾದವರಿಗೆ ಸರ್ಕಾರ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಪ್ರಿಯಾಂಕಾ ಗಾಂಧಿ ಹೇಳಿದರು. ಕೊರೋನಾ ವೈರಸ್ ರೋಗ ಹರಡಿದಾಗಿನಿಂದ ಉತ್ತರಪ್ರದೇಶ ಸರ್ಕಾರ ಜಾಗರೂಕವಾಗಿದ್ದರೆ ಇಂದು ಇಂತಹ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ. ಮೊದಲಿನಿಂದಲೂ ಉತ್ತಮ ಆರೋಗ್ಯ ವ್ಯವಸ್ಥೆ ನಿರ್ವಹಿಸಿದ್ದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತು ಸಾವುಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದಿತ್ತು ಎಂದು ಪ್ರಿಯಾಂಕಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದಲ್ಲಿ ದಿನಕ್ಕೆ 20,000ಕ್ಕೂ ಹೆಚ್ಚು ಜನರಿಗೆ ಕೋವಿಡ್ ದೃಢವಾಗುತ್ತಿದೆ. ನಿನ್ನೆ 20,510 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಸಾವಿನ ಸಂಖ್ಯೆ 67 ವರದಿಯಾಗಿವೆ.