ಶತಾಯುಷಿ, ಸಂಶೋಧಕ, ನಿಘಂಟು ತಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು. ಸೋಮವಾರ ಬೆಳಗ್ಗಿನ ಜಾವ 1:15ರ ಸುಮಾರಿಗೆ ವಯೋಸಹಜ ಖಾಯಿಲೆಗಳಿಂದ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಖ್ಯಾತ ವಿದ್ವಾಂಸರೂ ಪ್ರಾಧ್ಯಾಪಕರೂ ಆಗಿದ್ದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ನಿಘಂಟು ಅಲ್ಲದೇ ಸಾಹಿತ್ಯ, ಸಂಶೋಧನೆ, ವಿಮರ್ಶೆ, ಅನುವಾದ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಅವರು ಕನ್ಮಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿ ನಡೆದಾಡುವ ನಿಘಂಟು, ಶಬ್ದಬ್ರಹ್ಮ ಎಂಬ ಬಿರುದುಗಳಿಗೆ ಪಾತ್ರರಾಗಿದ್ದರು.
ಅವರ ಸಾಧನೆಗೆ ನಾಡೋಜ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.
ಜಯನಗರದ 7ನೇ ಬ್ಲಾಕ್ ನಲ್ಲಿರುವ ಅವರ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.