ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿದ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕ್ರಮಕ್ಕೆ ಮುಂದಾಗಿದ್ದು, ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ಹೇಳಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಕೊರೊನಾದಿಂದಾಗಿ ರಾಜ್ಯ ಸೂತಕದ ಮನೆಯಾಗಿದೆ. ಆಕ್ಸಿಜನ್, ಬೆಡ್, ವೆಂಟಿಲೇಟರ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವೀಡಿಯೋ ಕಾನ್ಫರೆನ್ಸ್ ಮುಲಕ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲು ಉದ್ದೇಶಿಸಿದ್ದೆ. ಇದು ಜಿಲ್ಲಾಧಿಕಾರಿಗಳ ಸಭೆ ಅಥವಾ ಪ್ರಗತಿ ಪರಿಶೀಲನೆ ಸಭೆ ಅಲ್ಲ. ಮಾಹಿತಿ ಸಂಗ್ರಹಕ್ಕೆ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಲು ಉದ್ದೇಶಿಸಿದ್ದೇನೆ ಎಂದು ಹೇಳಿದರು.
2009ರಲ್ಲಿಯೂ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕೊರೊನಾ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.