ಅಫ್ಘಾನಿಸ್ತಾನ, ಬಾಂಗ್ಲಾದೇಶ, ಪಾಕಿಸ್ತಾನದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಅರ್ಜಿ ಆಹ್ವಾನಿಸಿರುವ ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ -ಐಯುಎಂಎಲ್ ಮಂಗಳವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಗುಜರಾತ್, ರಾಜಸ್ಥಾನ, ಛತ್ತೀಸ್ಗಡ, ಹರಿಯಾಣ ಮತ್ತು ಪಂಜಾಬ್ನ 13 ಜಿಲ್ಲೆಗಳಲ್ಲಿ ನೆಲೆಸಿರುವ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಮುಸ್ಲಿಮೇತರರಾದ ಹಿಂದೂಗಳು, ಸಿಖ್ಖರು, ಜೈನರು ಮತ್ತು ಬೌದ್ಧರಿಗೆ ಭಾರತೀಯ ಪೌರತ್ವ ನೀಡಲು ಕೇಂದ್ರವು ಶುಕ್ರವಾರ ಅರ್ಜಿ ಆಹ್ವಾನಿಸಿತ್ತು. ಕೇಂದ್ರದ ಈ ನಡೆಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮದಲ್ಲೂ ಕೇಂದ್ರದ ನಡೆಗೆ ವಿರೋಧ ವ್ಯಕ್ತವಾಗಿದೆ.
2019ರಲ್ಲಿ ಜಾರಿಗೆ ತರಲಾದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳನ್ನು ಇನ್ನೂ ರಚಿಸಿಲ್ಲ. ಆದರೂ ಪೌರತ್ವ ಕಾಯ್ದೆ 1955 ಮತ್ತು 2009 ರಲ್ಲಿ ಕಾನೂನಿನಡಿಯಲ್ಲಿ ರೂಪಿಸಲಾದ ನಿಯಮಗಳಡಿಯಲ್ಲೇ ಈ ಅರ್ಜಿ ಆಹ್ವಾನಿಸಿ, ತಕ್ಷಣ ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯ ಈ ಅಧಿಸೂಚನೆಯನ್ನು ಹೊರಡಿಸಿದೆ..