ನವದೆಹಲಿ : ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ದಲಿತ ಮಹಿಳೆಯ ಪೊಲೀಸ್ ಲಾಕಪ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ರಾಜ್ಯ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ನೋಟಿಸ್ ಜಾರಿಗೊಳಿಸಿದೆ.
ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಪಾದ್ರಿಯೊಬ್ಬರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮರಿಯಮ್ಮ ಎಂಬವರನ್ನು ಆಕೆಯ ಇಬ್ಬರು ಸಂಬಂಧಿಗಳ ಜೊತೆಗೆ ಬಂಧಿಸಲಾಗಿತ್ತು. ತಾನು ಕೆಲಸ ಮಾಡುತ್ತಿದ್ದ ಮನೆಯಿಂದ ಎರಡು ಲಕ್ಷ ರೂ. ಕಳ್ಳತನ ಮಾಡಿದ ಆರೋಪದಲ್ಲಿ ಬಂಧಿಸಲಾಗಿತ್ತು.
ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ನಂತರ ಆಕೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಕೆ ಸಾವಿಗೀಡಾದಳೆಂದು ಪೊಲೀಸರು ಹೇಳಿದ್ದಾರೆ. ಆದರೆ, ಇದೊಂದು ಲಾಕಪ್ ಸಾವು ಎಂದು ಆಕೆಯ ಕುಟುಂಬಸ್ಥರು ಆಪಾದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ವಿವರ ನೀಡುವಂತೆ ಆಯೋಗ ಸ್ಥಳೀಯ ಜಿಲ್ಲಾಡಳಿತ ಮತ್ತು ಪೊಲೀಸ್ ವರಿಷ್ಠರಿಗೆ ಸೂಚಿಸಿದೆ.