ಲಖನೌ : ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ರಾಜ್ಯಗಳಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆಯನ್ನು ಅವರು ತಳ್ಳಿ ಹಾಕಿದ್ದಾರೆ.
ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಜೊತೆಗೆ ಬಿಎಸ್ಪಿ ಮೈತ್ರಿ ನಡೆಯಲಿದೆ ಎಂಬ ಸುದ್ದಿಗಳನ್ನು ತಳ್ಳಿ ಹಾಕಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪಂಜಾಬ್ ನಲ್ಲಿ ಮಾತ್ರ ಶಿರೋಮಣಿ ಅಕಾಲಿ ದಳದ ಜೊತೆ ಮೈತ್ರಿಯಿರುತ್ತದೆ ಎಂದು ಅವರು ಹೇಳಿದ್ದಾರೆ.
ಎಐಎಂಐಎಂ ಹಾಗೂ ಬಿಎಸ್ಪಿ ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲಿವೆ ಎಂಬ ಸುದ್ದಿಯು ಸುದ್ದಿವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು. ಈ ಸುದ್ದಿ ಸಂಪೂರ್ಣ ಸುಳ್ಳು ಮತ್ತು ಹಾದಿ ತಪ್ಪಿಸುವ ಹಾಗೂ ಆಧಾರ ರಹಿತ ಸುದ್ದಿಯಾಗಿದೆ. ಇದರಲ್ಲಿ ಕೊಂಚವೂ ಸತ್ಯವಿಲ್ಲ. ಬಿಎಸ್ಪಿ ಇದನ್ನು ನಿರಾಕರಿಸುತ್ತದೆ ಎಂದು ಮಾಯಾವತಿ ಹೇಳಿದ್ದಾರೆ.