ಬೆಂಗಳೂರು; ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ [ಟಿ.ಪಿ.ಸಿ.ಸಿ] ನೇಮಕಗೊಂಡಿರುವ ಸಂಸದ ಅನುಮುಲಾ ರೇವಂತ್ ರೆಡ್ಡಿ ಬುಧವಾರ ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ರಾಜ್ಯ ಕಾಂಗ್ರೆಸ್ ಮುಖಂಡರನ್ನು ನಗರದಲ್ಲಿಂದು ಆಹ್ವಾನಿಸಿದರು.
ಇಂದು ಬೆಳಿಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅನುಮುಲಾ ರೇವಂತ್ ರೆಡ್ಡಿ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಸ್ವಾಗತಿಸಿದರು.
ಬಳಿಕ ಕೆಪಿಸಿಸಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು. ನಂತರ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಆಹ್ವಾನಿಸಿದರು.
ನಂತರ ಮಾಜಿ ಸಚಿವ ಎಂ.ಬಿ.ಪಾಟೀಲ್, ಸಂಸದ ಡಿ.ಕೆ. ಸುರೇಶ್ ಮತ್ತಿತರ ನಾಯಕರನ್ನು ಭೇಟಿ ಮಾಡಿ ವಿದ್ಯುಕ್ತವಾಗಿ ಆಮಂತ್ರಣ ನೀಡಿದರು.
ಸುದ್ದಿಗಾರರ ಜತೆ ಮಾತನಾಡಿದ ರೇವಂತ ರೆಡ್ಡಿ, ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ತೆಲಂಗಾಣದಲ್ಲಿ ಉತ್ತಮ ಅವಕಾಶವಿದೆ. ಪ್ರತ್ಯೇಕ ರಾಜ್ಯ ಸ್ಥಾಪನೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಬಗ್ಗೆ ಜನತೆಗೆ ಒಲವಿದೆ. ಜನ ವಿರೋಧಿ ಟಿ.ಆರ್.ಎಸ್. ಪಕ್ಷಕ್ಕೆ ಮತದಾರರು ಮುಂದಿನ ಚುನಾವಣೆಯಲ್ಲಿ ಸೂಕ್ತ ಪ್ರತ್ಯುತ್ತರ ನೀಡಲಿದ್ದಾರೆ. ಪಕ್ಷ ಸಂಘಟನೆಗಾಗಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.