ಮಂಗಳೂರು: ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗ ಸೇರಿದಂತೆ ರಾಜ್ಯಾದ್ಯಂತ ಪಿಡಿಯಾಡ್ರಿಕ್ ಹೆಲ್ತ್ ಕ್ಯಾಂಪ್ ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರಿನ ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯ ಮೆಡಿಸಿನ್ ವಿಭಾಗದ ನೂತನ 32 ಬೆಡ್ ಸೌಲಭ್ಯವುಳ್ಳ ಐಸಿಯು ಘಟಕವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಉಡುಪಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಈಗಾಗಲೇ ವಾತ್ಸಲ್ಯ ಯೋಜನೆಯಡಿ ಮಕ್ಕಳ ಸಂಪೂರ್ಣ ಆರೋಗ್ಯ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ. ಪ್ರತಿ ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಪಿಡಿಯಾಟ್ರಿಕ್ ಹೆಲ್ತ್ ಕ್ಯಾಂಪ್ ಹಮ್ಮಿಕೊಂಡು, ಮಕ್ಕಳ ಪೌಷ್ಟಿಕ ಆಹಾರದ ಕೊರತೆ ಮುಂತಾದ ಸಮಸ್ಯೆಗಳನ್ನು ಪತ್ತೆ ಹಚ್ಚಲು ಕ್ರಮವಹಿಸಲಾಗಿದೆ. ಸಮಸ್ಯೆ ಕಂಡುಬಂದ ಮಕ್ಕಳನ್ನು ವೆನ್ ಲಾಕ್ ನಂತರ ಜಿಲ್ಲಾ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಆಸ್ಪತ್ರೆಗಳಲ್ಲಿರುವ ಒಟ್ಟು ಐಸಿಯು ಪೈಕಿ ಶೇಕಡಾ 50ರಷ್ಟು ಐಸಿಯುಗಳನ್ನು ಮಕ್ಕಳ ಚಿಕಿತ್ಸೆಗಾಗಿ ಮೀಸಲಿಡಲು ಸೂಚಿಸಲಾಗಿದೆ ಎಂದರು.
ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಮೊದಲ ಬಾರಿಗೆ ಇಂದು ಭೇಟಿ ನೀಡಿದ್ದು, ಗೃಹ ಸಚಿವರಾಗಿ ಹಲವಾರು ಬಾರಿ ಭೇಟಿ ನೀಡಿದ್ದೇನೆ. ಇಲ್ಲಿನ ಕೋವಿಡ್ ಸ್ಥಿತಿಗತಿ, ನಿರ್ವಹಣೆ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಲು ಇಲ್ಲಿಗೆ ಭೇಟಿ ನೀಡಿದ್ದೇನೆ. ವಿಶೇಷವಾಗಿ ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣವಾಗಿ ನಿಯಂತ್ರಣ ಮಾಡಬೇಕು ಎಂಬ ಗುರಿ ಸರ್ಕಾರಕ್ಕಿದೆ. ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅಗತ್ಯ. ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದರು.
ಕೋವಿಡ್ 1 ಮತ್ತು 2ರ ಅಲೆಯ ವೇಳೆ ಉಂಟಾದ ಪರಿಸ್ಥಿತಿಯ ಬಗ್ಗೆ ನಮಗೆ ಅನುಭವವಿದೆ. ಕೇರಳ ಮತ್ತು ಮಹಾರಾಷ್ಟ್ರದ ಮೂಲಕ ಸೋಂಕು ಹರಡಿ ಇಡೀ ರಾಜ್ಯಕ್ಕೆ ವ್ಯಾಪಿಸಿತ್ತು. ಈ ಹಿನ್ನೆಲೆಯಲ್ಲಿ ತಾವು ಅಧಿಕಾರ ವಹಿಸಿಕೊಂಡ ತಕ್ಷಣ ತಜ್ಞರ ಜೊತೆ ಚರ್ಚಿಸಿ, ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಗಡಿಜಿಲ್ಲೆಗಳಲ್ಲಿ ಜಾಗೃತಿ ವಹಿಸಲು ಹಾಗೂ ಪಕ್ಕದ ರಾಜ್ಯಗಳಿಂದ ಬರುವವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನ ಕೈಗೊಂಡಿದ್ದು, ಮೊನ್ನೆ ಮೈಸೂರಿಗೆ ಭೇಟಿ ನೀಡಿದ್ದು, ಇಂದು ಮಂಗಳೂರು ಮತ್ತು ಉಡುಪಿ ಜಿಲ್ಲೆಗೆ ಆಗಮಿಸಿರುವುದಾಗಿ ತಿಳಿಸಿದರು.
ಸುದೀರ್ಘ ಚರ್ಚೆ ನಡೆಸಿದ ಬಳಿಕ 9, 10 ಮತ್ತು ಪಿಯುಸಿ ತರಗತಿಗಳನ್ನು ಪರ್ಯಾಯ ದಿನಗಳಲ್ಲಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದರ ಪ್ರಗತಿ ನೋಡಿಕೊಂಡು ಇತರ ತರಗತಿಗಳನ್ನು ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬಿಜೆಪಿ ಶಾಸಕ ಸತೀಸ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಸತೀಶ್ ರೆಡ್ಡಿ ಸಾರ್ವಜನಿಕ ಜೀವನದಲ್ಲಿ ಇರುವವರು. ಹಲವು ವಿಚಾರಗಳಲ್ಲಿ ನ್ಯಾಯಸಮ್ಮತ ನಿರ್ಧಾರ ಕೈಗೊಂಡಿರುತ್ತಾರೆ. ಈ ದ್ವೇಷದಿಂದ ಯಾರೋ ಈ ಕೃತ್ಯವೆಸಗಿರಬಹುದು.ಈಗಾಗಲೇ ಶಾಸಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಮಧ್ಯರಾತ್ರಿಯೇ ಪೊಲೀಸ್ ಆಯುಕ್ತರು, ಡಿಸಿಪಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೀಘ್ರ ಆರೋಪಿಗಳನ್ನು ಬಂಧಿಸಲಿದ್ದಾರೆ. ಮುಂದೆ ಇಂತಹ ಘಟನೆ ನಡೆಯದಂತೆ ಇಡೀ ಏರಿಯಾದಲ್ಲಿ ಸಿಸಿಟಿವಿ ಅಳವಡಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಎರಡು ಡೋಸ್ ಲಸಿಕೆ ಪಡೆದವರಿಗೂ ಸೋಂಕು ಬಂದಿದೆ. ಆದರೆ ಅದರ ತೀವ್ರತೆ ಕಡಿಮೆ ಇರುತ್ತದೆ. ಐಸಿಯು ಹೋಗುವ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಆದ್ದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.