ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಕಬಕ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ ವಾಹನ ಜಾಥಾದಲ್ಲಿ ಸಾವರ್ಕರ್ ಭಾವಚಿತ್ರ ಇದ್ದುದನ್ನು ಕಂಡ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ವಾಹನಕ್ಕೆ ತಡೆ ಒಡ್ಡಿರುವ ಘಟನೆ ಭಾನುವಾರ ನಡೆದಿದೆ.
ಗ್ರಾಮ ಪಂಚಾಯತ್ ಸಭೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನವಾಗಿರಲಿಲ್ಲ. ಬ್ರಿಟಿಷರೊಂದಿಗೆ ಕ್ಷಮೆ ಕೇಳಿ ಅವರ ಪರವಾಗಿ ಕೆಲಸ ಮಾಡಿದ ಸಾವರ್ಕರ್ ಭಾವಚಿತ್ರವನ್ನು ನೈಜ ಸ್ವಾತಂತ್ರ್ಯ ಹೋರಾಟಗಾರರ ಚಿತ್ರದೊಂದಿಗೆ ಸೇರಿಸಿರುವುದು ಸರಿಯಲ್ಲ ಎಂದು ಎಸ್ ಡಿಪಿಐ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕೆಲವು ಹೊತ್ತು ಮಾತಿನ ಚಕಮಕಿ ನಡೆಯಿತು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಉಭಯ ಕಡೆಯವರನ್ನು ಸಮಾಧಾನ ಪಡಿಸಿ ಜಾಥಾಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಸ್ಥಳೀಯರನ್ನು ಪೊಲೀಸರು ಚದುರಿಸಿದರು.
ಈ ಬಗ್ಗೆ “ಪ್ರಸ್ತುತ”ದೊಂದಿಗೆ ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಫಾರೂಕ್, ಗ್ರಾಮ ಪಂಚಾಯತ್ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳದೆ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ. ಇದು ಇತರ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ಬ್ರಿಟಿಷರೊಂದಿಗೆ ಕೈಜೋಡಿಸಿದ ಸಾವರ್ಕರ್ ಫೋಟೋ ಬಳಸುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದೇವೆ ಎಂದರು.