ಮಡಿಕೇರಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಮಡಿಕೇರಿ ಇಂದಿರಾಗಾಂಧಿ ವೃತ್ತದಲ್ಲಿ ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ಸಿಗರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಿ ಜನಸಾಮಾನ್ಯರಿಗೆ ನೆರವಾಗುವ ಬದಲು ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಆರೋಪಿಸಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಮಾತನಾಡಿ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ, ಮಾಜಿ ಸಚಿವೆ ಸುಮಾ ವಸಂತ್, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ಼್ ಪ್ರವೀಣ್, ಕೆಪಿಸಿಸಿ ಪ್ರಮುಖರಾದ ಟಿ.ಪಿ.ರಮೇಶ್, ಶಾಹಿದ್ ತೆಕ್ಕಿಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ,ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು,ಯುವ ಘಟಕದ ಹನೀಫ್ ಸಂಪಾಜೆ, ಜಿ.ಪಂ, ತಾ.ಪಂ ಮಾಜಿ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.