ರಾಮನಗರ : ರಾಮನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎ.ಕೆ.ಅಬ್ದುಲ್ ಸಮದ್(86) ಇಂದು ಮುಂಜಾನೆ ನಿಧರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಬ್ದುಲ್ ಸಮದ್ ಬೆಂಗಳೂರು ಬೆನ್ಸನ್ ಟೌನ್ ನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಕಾಂಗ್ರೆಸಿನ ಹಿರಿಯ ನಾಯಕರಾಗಿದ್ದ ಅವರು 1978 ರಲ್ಲಿ ರಾಮನಗರದ ಶಾಸಕರಾಗಿ ಆಯ್ಕೆಯಾಗಿದ್ದರು. ಗುಂಡೂರಾವ್ ನೇತೃತ್ವದ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. 1983 ವಿಧಾನ ಸಭಾ ಚುಣಾವಣೆಯ ಸೋಲಿನ ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ಇಂದು ಸಂಜೆ ನೆರವೇರಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ
ಮಾಜಿ ಸಚಿವರು, ಹಿರಿಯ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸಮದ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ಅಬ್ದುಲ್ ಸಮದ್ ಅವರು ಹಿರಿಯ ನಾಯಕರು. ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಸಮದ್ ಅವರು ಗೂಂಡೂರಾವ್ ಅವರ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ತಮ್ಮ ಕಾರ್ಯನಿರ್ವಹಿಸಿದ್ದರು.
ಸಮದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.