ಮಂಗಳೂರು: ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ಆರೋಪದಲ್ಲಿ ಹಿಂದೂ ಮಹಾ ಸಭಾ, ಇದರ ರಾಜ್ಯಾಧ್ಯಕ್ಷರನ್ನು ಇಂದು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರ ನಡೆಯನ್ನು ಸಮರ್ಥಿಸಿದ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾ ಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡುತ್ತಾ, ” ನಾವು ಹಿಂದುಗಳ ಮೇಲೆ ದೌರ್ಜನ್ಯವೆಸಗಿದ ಗಾಂಧಿಜಿಯನ್ನೇ ಕೊಲೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ ನಮಗೆ ” ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬರ್ಕೆ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಮಾತ್ರವಲ್ಲ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಎಲ್ಲಾ ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.