ಬೆಂಗಳೂರು : ಕೃಷ್ಣಾ ನ್ಯಾಯಾಧೀಕರಣ ಅಂತಿಮ ತೀರ್ಪು ಗೆಜೆಟ್ ಅಧಿಸೂಚನೆ ಪ್ರಕಟಣೆಯಾದ ನಂತರ ಯೋಜನೆಯ ವಿವರವಾದ ಯೋಜನಾ ವರದಿಗೆ ಸಕ್ಷಮ ಪ್ರಾಧಿಕಾರಗಳ ತಿರುವಳಿಯೊಂದಿಗೆ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519.60 ಮೀ.ದಿಂದ 524.256 ಮೀ.ಗೆ ಎತ್ತರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನ ಸಭೆಗೆ ಇಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ದಿನಾಂಕ:25.08.2021ರಂದು ನವದೆಹಲಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಜಲ ಶಕ್ತಿ ಸಚಿವಾಲಯದ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪುನ್ನು ಆದ್ಯತೆ ಮೇರೆಗೆ ಗೆಜೆಟ್ ಪ್ರಕಟಣೆ ಮಾಡುವಂತೆ ಕೋರಲಾಗಿದೆ ಮತ್ತು ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಬಾಕಿ ಇರಿಸಿ ರಾಜ್ಯವು ಸಲ್ಲಿಸಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ವಿವರವಾದ ಯೋಜನಾ ವರದಿಯ ಅಪ್ರೈಸಲ್ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಲು ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಎಸ್. ಪಾಟೀಲ್ರವರ ಪ್ರಶ್ನೆಗೆ ಉತ್ತರವಾಗಿ ಸಚಿವರು ತಿಳಿಸಿದರು.
2013ರಿಂದ 2019ರವರೆಗೆ ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಏನೂ ಮಾಡಲಿಲ್ಲ. ಮಹಾರಾಷ್ಟ್ರದೊಂದಿಗೆ ಮಾತನಾಡಿ ಕೃಷ್ಣಾ ಜಲವಿವಾದದ ವಿಷಯದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಜಂಟಿಯಾಗಿ ಪ್ರಮಾಣ ವಚನ ಸಲ್ಲಿಸಿದ್ದೆವೆ. ನೀವು ಏನು ಮಾಡಲಿಲ್ಲ ಎಂದು ಹೇಳಿದರು.
ಸರ್ವೋಚ್ಛ ನ್ಯಾಯಾಲಯದ ದಿನಾಂಕ:16.09.2011ರ ತೀರ್ಪಿನಂತೆ ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪನ್ನು ಗೆಜೆಟ್ ಪ್ರಕಟಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು. ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನ ಕುರಿತಾಗಿ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ರಾಜ್ಯಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ವಿಶೇಷ ಅನುಮತಿ ಅರ್ಜಿಗಳು ಇತ್ಯರ್ಥವಾಗಬೇಕಿದೆ ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಮಾರ್ಪಡಿಸುವಂತೆ ಮತ್ತು ನ್ಯಾಯಾಧೀಕರಣ ತೀರ್ಪನ್ನು ಗೆಜೆಟ್ ಪ್ರಕಟಣೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದಿನಾಂಕ:18.02.2019ರಂದು ಮಾನ್ಯ ಸರ್ವೋಚ್ಛ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರವು ಮಧ್ಯಕಾಲಿನ ಅರ್ಜಿಯನ್ನು ಸಲ್ಲಿಸಿದೆ. ಸದರಿ ದಾವೆಯಲ್ಲಿ ಕೇಂದ್ರ ಸರ್ಕಾರವನ್ನು implead ಮಾಡಲು ಅನುಮತಿ ಕೋರಿ ದಿನಾಂಕ:23.01.2020ರಂದು ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಸಚಿವರು ವಿವರವಾಗಿ ಉತ್ತರಿಸಿದರು.