ಅಹ್ಮದ್ ನಗರ: ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ಐ.ಸಿ.ಯು (ತೀವ್ರ ನಿಗಾ ಘಟಕ) ವಿಭಾಗದಲ್ಲಿ ಶನಿವಾರ ಬೆಳಗ್ಗೆ ನಡೆದ ಅಗ್ನಿ ದುರಂತದಲ್ಲಿ ಅಸುನೀಗಿದವರ ಸಂಖ್ಯೆ 11 ಕ್ಕೇರಿದೆ.
ಗಂಭೀರ ಗಾಯಗೊಂಡಿರುವ ನಾಲ್ಕೈದು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ 17 ರೋಗಿಗಳು ಚಿಕಿತ್ಸೆಗಾಗಿ ದಾಖಲಾಗಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಉಳಿದ ರೋಗಿಗಳನ್ನು ಮತ್ತೊಂದು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಭೋಸ್ಲೆ ಸುದ್ದಿಗಾರರಿಗೆ ತಿಳಿಸಿದರು.
ಘಟನೆಯ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ “ ಜೀವ ನಷ್ಟದಿಂದ ದುಃಖಿತನಾಗಿದ್ದೇನೆ” ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದ ಆಸ್ಪತ್ರೆಯೊಂದರಲ್ಲಿ ನಡೆದ ಅಗ್ನಿ ಅವಘಡದಿಂದಾಗಿ ಪ್ರಾಣಹಾನಿಯಾಗಿರುವುದು ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ದುರಂತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ದುರಂತ ನಡೆದಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ಡಾ. ಭೋಸ್ಲೆ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆದೇಶಿಸಲಾಗಿದೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಠಾಕ್ರೆ ಸಂತಾಪ ಸೂಚಿಸಿ, ಅಗತ್ಯವಿರುವ ಎಲ್ಲಾ ನೆರವಿನ ಭರವಸೆಗಳನ್ನು ನೀಡಿದ್ದಾರೆ ಎಂದು ಸಚಿವ ನವಾಬ್ ಮಲಿಕ್ ತಿಳಿಸಿದ್ದಾರೆ.