ಬೆಂಗಳೂರು : ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಜಾತ್ಯತೀತ ಜನತಾದಳ (JDS) ಮೈತ್ರಿ ಬಹುತೇಕ ಖಚಿತಗೊಂಡಿದೆ. ದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬಿಜೆಪಿಯ ಉನ್ನತ ನಾಯಕರ ಜತೆ ಚರ್ಚೆ ನಡೆಸಿದ ಬಳಿಕ ಮೈತ್ರಿಯ ಬಗೆಗಿನ ನಿರ್ಧಾರಕ್ಕೆ ಬರಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪಕ್ಷಗಳ ಒಪ್ಪಂದದ ಪ್ರಕಾರ ಕೋಲಾರ- ಚಿಕ್ಕಬಳ್ಳಾಪುರ, ಮೈಸೂರಿನ ಎರಡು ಸ್ಥಾನಗಳು, ಬೆಂಗಳೂರು ಗ್ರಾಮೀಣ, ಮಂಡ್ಯ, ಹಾಸನ ಮತ್ತು ತುಮಕೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಬಿಜೆಪಿ ಮತದಾರರು ಮತ ಚಲಾಯಿಸಲಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ ಎನ್ನಲಾಗಿದೆ.
ಆದರೆ ಇದೀಗಾಗಲೇ “ದಕ್ಷಿಣ ಕರ್ನಾಟಕದ ಪ್ರದೇಶ ಸೇರಿದಂತೆ ಬಿಜೆಪಿಯು ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರೂ, ಪಕ್ಷದ ಮತದಾರರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಸೂಚಿಸಲಾಗುವುದು” ಎಂದು ಪಕ್ಷದ ಮೂಲಗಳು ಸ್ಪಷ್ಟನೆ ನೀಡಿದೆ.
ಜೆಡಿಎಸ್ ಮತ್ತು ಬಿಜೆಪಿ ಕುರಿತಾದ ಮೈತ್ರಿಯ ಚರ್ಚೆಗಳು ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿಯ ವೇಳೆ ಕೇಳಿಬಂದಿದ್ದವು. ಇದೀಗ ಎಲ್ಲಾ ಚರ್ಚೆಗಳಿಗೆ ತೆರೆ ಎಳೆಯಲು ಮುಂದಾಗಿರುವ ಜೆಡಿಎಸ್, ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಇರಾದೆ ವ್ಯಕ್ತಪಡಿಸಿದೆ ಎನ್ನಲಾಗಿದೆ. ವಿಧಾನ ಪರಿಷತ್ ನಲ್ಲಿ ಬಹುಮತ ಪಡೆಯಲು ಜೆಡಿಎಸ್ ಜತೆಗಿನ ಮೈತ್ರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಮ್ಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.