ಬೆಳಗಾವಿ: ರಾಜ್ಯದ ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಎಲ್ಲಾ ಒಂಬತ್ತು ಘಾಟ್ ರಸ್ತೆಗಳು ಕಳೆದ ಮೂರು ವರ್ಷಗಳ ಅತಿವೃಷ್ಟಿಯಿಂದಾಗಿ ಹಾನಿಗೀಡಾಗಿದ್ದು, ಸದರಿ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ.ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದರು.
ಘಾಟ್ ರಸ್ತೆಗಳ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ರಸ್ತೆಗಳನ್ನು ಆದಷ್ಟು ಬೇಗನೆ ಸರಿಪಡಿಸಲಾಗುವುದು ಎಂದರು.
ಪ್ರಮುಖವಾಗಿ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ 26ಕ್ಕೂ ಅಧಿಕ ಕೋಟಿ ರೂ. ಮಂಜೂರಾಗಿದ್ದು, ಆರ್ಥಿಕ ಬಿಡ್ಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. ಕಾಮಗಾರಿ ಶೀಘ್ರದಲ್ಲೇ ಪ್ರಾರಂಭಿಸಲು ಕಾರ್ಯಾದೇಶ ನೀಡಲಾಗುವುದು. ಅದೇ ರೀತಿ, ಚಾರ್ಮಾಡಿ ಘಾಟಿಯಲ್ಲಿ ರಸ್ತೆ ನಿರ್ವಹಣೆಗೆ 19.36 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಕಾಮಗಾರಿ ಸದ್ಯದಲ್ಲೇ ಪ್ರಾರಂಭವಾಗಲಿದೆ.
ಸಂಪಾಜೆ ಘಾಟ್ನಲ್ಲಿ ಕಾಂಕ್ರೀಟ್ ತಡೆಗೋಡೆಗಳ ನಿರ್ಮಾಣ ಕಾಮಗಾರಿಯನ್ನು 56.84 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ಮುಕ್ತಾಯದ ಹಂತದಲ್ಲಿದೆ. ದೇವಿಮನೆ ಘಾಟ್ ರಸ್ತೆಯನ್ನು 360 ಕೋಟಿ ರೂ. ವೆಚ್ಚದಲ್ಲಿ ಇಪಿಸಿ ಮಾದರಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂದು ಉತ್ತರ ನೀಡಿದರು.