ಹೊಸ ವರ್ಷಾಚರಣೆ, ಕ್ರಿಸ್ಮಸ್ ಆಚರಣೆಗೆ ನಿರ್ಬಂಧ ಹೇರಿದ ಸರ್ಕಾರ

Prasthutha|

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿಂದು ಕೋವಿಡ್ ನಿಯಂತ್ರಣ ಕುರಿತ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಡಾ. ಕೆ. ಸುಧಾಕರ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ವೈದ್ಯಕೀಯ ಕ್ಷೇತ್ರದ ತಜ್ಞರು ಪಾಲ್ಗೊಂಡಿದ್ದರು.

- Advertisement -

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಹರಡುವುದನ್ನು ತಡೆಯಲು ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ ಹಬ್ಬದ ಆಚರಣೆಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಕುರಿತು ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು; ಡಿಸೆಂಬರ್ 30ರಿಂದ ಹೊಸ ವರ್ಷದ ಜನವರಿ 2ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು.

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಕೋವಿಡ್ ಸೋಂಕು ಹರಡುವ ಸಾಧ್ಯತೆಗಳಿದ್ದು, ಇದನ್ನು ತಪ್ಪಿಸಲು ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು; ಈ ಸಂದರ್ಭದಲ್ಲಿ ಯಾವುದೇ ರೀತಿಯ ಬಹಿರಂಗ ಸಭೆ, ಸಮಾರಂಭಗಳನ್ನು ಏರ್ಪಡಿಸುವಂತಿಲ್ಲ; ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ವಿಶೇಷ ಸಭೆ, ಸಮಾರಂಭಗಳನ್ನು ನಡೆಸಲು ನಿರ್ಬಂಧ ಹೇರಲಾಗುವುದು; ಕ್ಲಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಗ್ರಾಹಕರಿಗೆ ಅವಕಾಶ ಕಲ್ಪಿಸಬಹುದಾಗಿದೆ; ಔತಣಕೂಟಗಳನ್ನು ನಡೆಸುವುದಕ್ಕೆ ಅವಕಾಶ ಇರುವುದಿಲ್ಲ. ವಸತಿ ಸಮುಚ್ಛಯಗಳಲ್ಲೂ ಸಾಮೂಹಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

- Advertisement -

ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸುವ ಮೂಲಕ ಆಚರಿಸಬಹುದಾಗಿದೆ. ವಿಶೇಷವಾಗಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂಜಿ. ರಸ್ತೆ, ಬ್ರಿಗೇಡ್ ರಸ್ತೆ ಮುಂತಾದ ಕಡೆಗಳಲ್ಲಿ ಬಹಿರಂಗ ಹಾಗೂ ಸಾಮೂಹಿಕ ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ; ಕ್ಲಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಮತ್ತು ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.



Join Whatsapp