ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಇನ್ನೂ ಮುಂದೆ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸುವ ಮುನ್ನ ಅಲ್ಲಿ ಸ್ಥಳಾಂತರಿಸಬೇಕಾದ ಸೇವೆಗಳು, ಭೂಸ್ವಾಧೀನ ಇನ್ನಿತರ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಪರಿಷತ್ತಿಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಸ್ತೆ ಗುಣಮಟ್ಟ ಕಾಪಾಡಿಕೊಳ್ಳಲು ಜಾಗತಿಕ ಮಾನದಂಡಗಳನ್ನು ಪಾಲನೆ ಮಾಡಲಾಗುತ್ತಿದೆ. ಆರಂಭದಿಂದ ಕಾಮಗಾರಿ ಮುಕ್ತಾಯದವರೆಗೂ ನಿಗಾವಹಿಸಿದ್ದು, ಮೂರನೇ ವ್ಯಕ್ತಿ ತಪಾಸಣೆ ನಡೆಸಲಾಗುತ್ತಿದೆ. ರಸ್ತೆ ನಿರ್ಮಾಣದ ವೇಳೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಲು ಕಾರ್ಯಪಡೆ ರಚಿಸಲಾಗಿದೆ ಎಂದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹವನ್ನು ಚುರುಕುಗೊಳಿಸಲು ವಿಶೇಷ ಅಭಿಯಾನ ನಡೆಸುವುದಾಗಿ ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವಿಗೆ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 382 ಎಕರೆ 27 ಗುಂಟೆ ಜಮೀನು ಒತ್ತುವರಿಯಾಗಿದೆ. ಈ ಸಂಬಂಧ 2626 ಒತ್ತುವರಿಗಳನ್ನು ಗುರುತಿಸಲಾಗಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಹೇಳಿದರು.