ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸುತ್ತಮುತ್ತ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎರಡನೇ ದಿನವಾದ ಶುಕ್ರವಾರ ಕೂಡ ಮುಂದುವರಿಸಿದ್ದಾರೆ. ಅಧಿಕಾರಿಗಳ ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ಈ ವೇಳೆ ನಡೆಯಿತು.
ಪೊಲೀಸ್ ಬಲಪ್ರಯೋಗಿಸಿ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳನ್ನು ತೆರವು ಗೊಳಿಸಲು ಯತ್ನಿಸಿದರು. ಜೆಸಿಬಿಯೊಂದಿಗೆ ಆಗಮಿಸಿದ್ದ ಅಧಿಕಾರಿಗಳು ಪಾಲಿಕೆ ನೀಡಿದ್ದ ಬೀದಿಬದಿ ವ್ಯಾಪಾರದ ಕಾರ್ಡ್ ಹೊಂದಿದ ಹೊರತಾಗಿಯೂ ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ವ್ಯಾಪಾರಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹೊಟ್ಟೆ ಪಾಡಿಗಾಗಿ ಸಣ್ಣಪುಟ್ಟ ವ್ಯಾಪಾರ ಮಾಡಿ ಜೀವನ ನಿರ್ವಹಿಸುತ್ತಿರುವ ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು ವ್ಯಾಪಾರಿಗಳು ದೂರಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಬೀದಿಬದಿ ವ್ಯಾಪಾರಸ್ಥರಿಗೆ ಕಾರ್ಡ್ ನೀಡಿರುವುದು ತಳ್ಳು ಗಾಡಿಯ ಮೂಲಕ ವ್ಯಾಪಾರ ಮಾಡಲು ಹೊರತು ಖಾಯಂ ಒಂದೇ ಕಡೆ ಕೂತು ವ್ಯಾಪಾರ ಮಾಡಲು ಅಲ್ಲ ಎಂದು ಸಮಜಾಯಿಷಿ ನೀಡಿದರು.