ಬೆಂಗಳೂರು: ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡಿದ ಚಿನ್ನದ ಆಭರಣಗಳನ್ನು ಗಟ್ಟಿಯನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೆ.ಆರ್.ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಬಾಬಾ ಜಾನ್, ಖಲೀಂ ಖಾನ್ ಹಾಗೂ ಸುರೇಶ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ 4 ಲಕ್ಷ 14 ಸಾವಿರ ರೂ.ಮೌಲ್ಯದ 91 ಗ್ರಾಂ ತೂಕದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.
ಆರೋಪಿಗಳು ಬಸ್ ಗಳಲ್ಲಿ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದರು. ಬಳಿಕ ಕದ್ದ ಆಭರಣಗಳನ್ನು ಕರಗಿಸಿ ಗಟ್ಟಿಯನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದರು.
ಇದೇ ರೀತಿ ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಒಡವೆಗಳನ್ನು ಕದ್ದುಕೊಂಡು ಹೋಗಿ ಗಟ್ಟಿಯನ್ನಾಗಿ ಮಾಡಿ ಮಾರಾಟ ಮಾಡಿದ್ದರು. ಈ ಸಂಬಂಧ ಕೆ.ಆರ್.ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಆಧರಿಸಿ ಪ್ರಕರಣ ದಾಖಲಿಸಿದ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಖಚಿತವಾದ ಮಾಹಿತಿ ಮೇಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.