ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ 29ಕ್ಕೂ ಹೆಚ್ಚು ಮಂದಿಯ ವಿರುದ್ಧ ನಾಲ್ಕನೇ ಎಫ್ಐಆರ್ ದಾಖಲಾಗಿದೆ.
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ.ಸುರೇಶ್ ಸೇರಿದಂತೆ 29ಕ್ಕೂ ಹೆಚ್ಚು ಮಂದಿಯ ವಿರುದ್ಧ ರಾಮನಗರ ತಹಶೀಲ್ದಾರ್ ವಿಜಯಕುಮಾರ್ ನೀಡಿರುವ ದೂರಿನ ಮೇಲೆ ರಾಮನಗರ ಗ್ರಾಮಾಂತರ ವೃತ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕನೇ ಎಫ್ಐಆರ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಶಾಸಕ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಟಿಬಿ ಜಯಚಂದ್ರ ಸೇರಿದಂತೆ ಇನ್ನೂ ಇತರರ ಹೆಸರಿದೆ. ಪಾದಯಾತ್ರೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾದ ನಾಲ್ಕನೇ ಎಫ್ ಐಆರ್ ಇದಾಗಿದ್ದು, ಸಿದ್ದರಾಮಯ್ಯ ವಿರುದ್ಧ ಮೂರು ಕೇಸ್ ದಾಖಲಾಗಿದೆ. ಮೂರು ದಿನಗಳ ಹಿಂದೆ ಸಾತನೂರು ಪೊಲೀಸ್ ಠಾಣೆಯಲ್ಲಿ 64 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.