ಮಡಿಕೇರಿ :ರಾಷ್ಟ್ರದ ಸಂಸ್ಕೃತಿಯನ್ನು ಪ್ರಪಂಚಕ್ಕೆ ವಿಸ್ತರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಯುವ ಒಕ್ಕೂಟ, ನೇತಾಜಿ ಗೆಳೆಯುರ ಬಳಗ ಮತ್ತು ಸಂಪಾಜೆ ಚಡಾವು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಸಪ್ತಾಹ ಅಂಗವಾಗಿ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಯುವಜನರಲ್ಲಿ ದೇಶ ಕಟ್ಟುವ ಶಕ್ತಿ ಇದೆ. ಆದ್ದರಿಂದ ಯುವಜನರು ಸಂಘಟಿತರಾಗಬೇಕು. ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ಬಡವರು, ಬಲ್ಲಿದರು, ಶೋಷಣೆಗೆ ತುತ್ತಾದವರಿಗೆ ನ್ಯಾಯ ಒದಗಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಅಗತ್ಯ. ಬಡ ಜನರಿಗೆ, ದುರ್ಬಲರಿಗೆ ವಂಚಿತರಾದವರಿಗೆ ನ್ಯಾಯ ಕಲ್ಪಿಸುವುದು, ಉಚಿತ ಕಾನೂನು ಅರಿವು ನೆರವು ಮೂಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದರು.
ಜನ ಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವುದು, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರವು ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಯುವಜನರು ಪೋಕ್ಸೋ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು. ಮಹಿಳೆಯರು, ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಬೇಕು. ಇಂತಹ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಎಚ್ಚರವಹಿಸಬೇಕು. ಪೋಕ್ಸೋ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು. ನೈಜ ಘಟನೆಗಳಿಗೆ ಒತ್ತು ನೀಡಬೇಕಿದೆ ಎಂದರು. ಕಾನೂನು ಸಂಘರ್ಷಕ್ಕೆ ತುತ್ತಾಗದೆ, ಕಾನೂನಿನ ಅರಿವು ನೆರವು ಪಡೆಯಬೇಕು ಎಂದರು.