ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಸಂಬಂಧ ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ, ಜೈಲಿಗೆ ಕಳುಹಿಸಿದ್ದು ಮತ್ತಿಬ್ಬರ ಬಂಧನದಿಂದ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಕಳೆದ ವರ್ಷ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಈ ಸಂಬಂಧ ಉಮಾಪತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು. ಇದೇ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು.
ಸುಂಕದಕಟ್ಟೆಯ ಬಾರ್ ಒಂದರ ಬಳಿಯಲ್ಲಿ ಈ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿದ್ದಂತ ದರ್ಶನ್ ಮತ್ತು ಸಂಜು ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಕರಣದ 16, 17ನೇ ಆರೋಪಿಗಳಾಗಿದ್ದರು. ಇವರನ್ನು ಜಯನಗರ ಪೊಲೀಸರ ವಶಕ್ಕೆ ನೀಡಲಾಗಿದೆ. ಜಯನಗರ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.