ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಪಿ ಅಗ್ರಹಾರದಲ್ಲಿ ನಡೆದಿದೆ.
ಕೆಪಿ ಅಗ್ರಹಾರದ ಚೆಲುವಪ್ಪಗಾರ್ಡನ್ ನಿವಾಸಿ ರಾಜು ಮತ್ತು ಜಯಂತಿ ದಂಪತಿಯ ದ್ವಿತೀಯ ಪುತ್ರಿ ಪೂಜಾ(16) ಮೃತ ವಿದ್ಯಾರ್ಥಿನಿ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ರಾಜು ಭದ್ರತಾ ಸಿಬ್ಬಂದಿ ಮತ್ತು ಪೇಟಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇವರ ಪತ್ನಿ ಜಯಂತಿ ಮನೆಯಲ್ಲಿಯೇ ಟೈಲರಿಂಗ್ ಕೆಲಸ ಮಾಡುತ್ತಿದ್ದು ದಂಪತಿಗೆ ಮೂವರು ಹೆಣ್ಣು ಮಕ್ಕಳು. ಈ ಪೈಕಿ ದ್ವಿತೀಯ ಪುತ್ರಿ ಪೂಜಾ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು.
ರಾಜು ದಂಪತಿ ಜ.22 ರಾತ್ರಿ 9 ಗಂಟೆಯ ಸುಮಾರಿಗೆ ಮನೆ ಸಮೀಪದ ಸಂಬಂಧಿಕರ ಮನೆಗೆ ಹೋಗಿದ್ದರು. ರಾತ್ರಿ 10 ಗಂಟೆಗೆ ವಾಪಸ್ ಬಂದಾಗ ಪೂಜಾ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದಿಲ್ಲ ಎಂದು ಪೋಷಕರು ಹೇಳುತ್ತಿದ್ದಾರೆ. ಕೆ.ಪಿ.ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.