ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೂ ಬಹಿರಂಗ ಸಭೆ ನಡೆಸುವಂತಿಲ್ಲ: ಕರ್ನಾಟಕ ಹೈಕೋರ್ಟ್‌

Prasthutha|

ಬೆಂಗಳೂರು: ಮೇಕೆದಾಟು ಪಾದಯಾತ್ರೆಯು ಇಂದು ಸಮಾರೋಪಗೊಳ್ಳುತ್ತಿದ್ದು,ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ನಗರದ ಬೇರೆಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ರಾಜ್ಯ ಸರ್ಕಾರ ಖಾತ್ರಿ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

- Advertisement -

ಗುಜರಾತ್ ಹೈಕೋರ್ಟ್‌ ನ ಹಾಲಿ  ಮುಖ್ಯ ನ್ಯಾಯಮೂರ್ತಿಯಾಗಿರುವ ಅರವಿಂದ್‌ ಕುಮಾರ್‌ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯವರಿಗೆ “ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ” ಎಂದು  ಬರೆದಿದ್ದ ಪತ್ರವನ್ನು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನಾಗಿ ಮಾರ್ಪಡಿಸಲಾಗಿತ್ತು.ಇದೀಗ  ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿದೆ.

ಫ್ರೀಡಂ ಪಾರ್ಕ್ ನಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸಲು ಅನುವು ಮಾಡುವ ಮೂಲಕ ಸಂಚಾರ ದಟ್ಟಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದಟ್ಟಣೆಯಾಗುವಂತಹ ಬೆಳವಣಿಗೆಗಳು ಕಂಡುಬಂದರೆ ತಕ್ಷಣ ಅಂತಹ ಚಟುವಟಿಕೆಗೆ ನಿರ್ಬಂಧ ವಿಧಿಸಬೇಕು. ರಾಜ್ಯ ಸರ್ಕಾರವು ನ್ಯಾಯಾಲಯದ ಆದೇಶವನ್ನುಆದಷ್ಟು ಬೇಗ ಜಾರಿಗೊಳಿಸಬೇಕು.  ಸಾರ್ವಜನಿಕ ಸಭೆ, ಪ್ರತಿಭಟನೆ ಇತ್ಯಾದಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಇ-ಗೆಜೆಟ್ ನಿಯಮಗಳನ್ನು ಸಲ್ಲಿಸಿದೆ. ಇದರ ಅಡಿ ರಾಜ್ಯ ಪೊಲೀಸ್‌ ಕಾಯಿದೆಯ ಸೆಕ್ಷನ್‌ 103 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 188ರ ಅಡಿ ವ್ಯಾಪ್ತಿ ಹೊಂದಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರು ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಬಹುದು” ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಿದೆ.



Join Whatsapp