ಮಂಡ್ಯ: ಬೆಂಗಳೂರಿನ ಜೆಜೆ ನಗರದಲ್ಲಿ ಕ್ಷುಲ್ಲಕ ವಿಚಾರಕ್ಕೆ ನಡೆದ ಚಂದ್ರು ಕೊಲೆ ಪ್ರಕರಣವನ್ನು ಮುಂದಿಟ್ಟು ಶಾಂತಿ ಕದಡುವ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ಗುರುವಾರ ಮಂಡ್ಯ ಪೂರ್ವ ಠಾಣೆಯಲ್ಲಿ ದೂರು ನೀಡಿದ್ದಾರೆ.
ಜವಾಬ್ದಾರಿಯಿಂದ ವರ್ತಿಸಬೇಕಾದ ಗೃಹಸಚಿವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾದ ಗೃಹಸಚಿವರೇ ಈ ರೀತಿ ಹೇಳಿಕೆ ನೀಡಿರುವುದು ಅಕ್ಷಮ್ಯ, ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ದಲಿತ ಯುವಕನನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ವಾಸ್ತವವಾಗಿ ಅಪಘಾತದ ನಂತರ ನಡೆದ ಘರ್ಷಣೆಯಲ್ಲಿ ಯುವಕ ಕೊಲೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದರು. ಆದರೆ ಉರ್ದು ಮಾತನಾಡದ ಕಾರಣಕ್ಕೆ ಕೊಲೆಯಾಗಿದೆ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದರು.