ಮಂಗಳೂರು: ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ತನಿಖೆಯಲ್ಲಿ ಸರಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅವರಲ್ಲಿ ಘಟನೆಯ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಈಶ್ವರಪ್ಪ ಜೊತೆ ಒನ್ ಟು ಒನ್ ಮಾತನಾಡುತ್ತೇನೆ, ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದರು. ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ ಎನ್ನುವ ಮಾಹಿತಿ ನನಗಿಲ್ಲ, ಈ ಬಗ್ಗೆ ಈಶ್ವರಪ್ಪ ಬಳಿ ಮಾತನಾಡುತ್ತೇನೆ ಎಂದಿದ್ದಾರೆ.
ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹದ ಕುರಿತು ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ವಿರೋಧ ಪಕ್ಷ ಕಾಂಗ್ರೆಸ್ ಇದರಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದೆ. ತನಿಖೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.