ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ನಾಮಕರಣ ಮಾಡಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು, ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಘ ಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.