ಬೆಂಗಳೂರು: ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಎಲ್ಲಾ ರಾಜ್ಯಗಳು ಮುನ್ನಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರ ಸೂಚಿಸಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ.
ಕೊರೊನಾ ನಾಲ್ಕನೇ ಅಲೆಯ ಆರಂಭವು ಕರ್ನಾಟಕದಲ್ಲಿ ನಾಲ್ಕು ವಾರದ ಬಳಿಕ ಶುರುವಾಗಲಿದೆ ಎಂದು ತಜ್ಞರ ತಂಡ ಮುನ್ಸೂಚನೆ ಕೊಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಮಧ್ಯಾಹ್ನ ಸಭೆ ನಡೆಯಲಿದೆ. ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಆರೋಗ್ಯ ಸಚಿವ ಡಾ. ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಸದಸ್ಯರು ಭಾಗಿಯಾಗಲಿದ್ದಾರೆ.
ಏಪ್ರಿಲ್ 27ರ ಬಳಿಕ ರಾಜ್ಯದಲ್ಲಿ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.