ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪಿಎಸ್ ಐ ಪರೀಕ್ಷಾ ಅಕ್ರಮದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ ಗೃಹ ಸಚಿವರು, ಯಾವುದೇ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರ ನಡೆಸದೆ, ಅಕ್ರಮ ಎಸಗಿದವರನ್ನು, ಕಾನೂನಿನ ಬಲೆಗೆ ತರಲು ಮುಂದಾಗಬೇಕು ಎಂದು ತಿಳಿಸಿದರು.
ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ, ನ್ಯಾಯ ಒದಗಿಸಲು, ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿ, ಮುಖ್ಯಮಂತ್ರಿಗಳ ಜತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ ಎಂದರು. ಇಂಥ ಕೃತ್ಯಗಳಿಂದ ಬಡ ಕುಟುಂಬದಿಂದ ಬಂದಂಥ ಪ್ರಾಮಾಣಿಕ ಹಾಗೂ ಪ್ರತಿಭಾವಂತ ಆಕಾಂಕ್ಷಿ ಗಳು, ಮೂಲೆ ಗುಂಪಾದರೆ, ಸಮಾಜಕ್ಕೆ ಆಗುವ ನಷ್ಟ ಅಪಾರ ಎಂದು ಹೇಳಿದರು.
ಈ ಅಕ್ರಮದ ಬಗ್ಗೆ ತಮ್ಮ ಬಳಿ ಸಾಕ್ಷ್ಯ ಇದೆ ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ತಮ್ಮ ಬಳಿ ಇರುವ ಸಾಕ್ಷ್ಯಗಳನ್ನು ಸಿಐಡಿ ಪೊಲೀಸರಿಗೆ ಒದಗಿಸಿ ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಬೇಕು ಎಂದು ಆರಗ ಜ್ಞಾನೇಂದ್ರ ಮನವಿ ಮಾಡಿದರು. ಈಗಲಾದರೂ ಖರ್ಗೆಯವರು ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳ ಬಳಿ ಹಂಚಿಕೊಳ್ಳಬೇಕು, ಅಕ್ರಮದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನು ಪ್ರಕ್ರಿಯೆಗಳಿಗೆ ಒಳಪಡಿಸಲು ಸಹಕರಿಸಬೇಕು ಎಂದು ಗೃಹ ಸಚಿವರು ಆಗ್ರಹಿಸಿದರು.