ಡಾ.ಪಿ.ರವೀಂದ್ರನಾಥ್ ಅವರ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕಾರ ಮಾಡಬಾರದು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯ

Prasthutha|

ಬೆಂಗಳೂರು: ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದರಿಂದ ಬೇಸತ್ತು ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕಾರ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ  ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

- Advertisement -

ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ ದಲಿತ ಹಾಗೂ ದಕ್ಷ ಅಧಿಕಾರಿ ರವೀಂದ್ರನಾಥ್ ಅವರು ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ತಿಮಿಂಗಿಲಗಳಿಗೆ ಬಲೆ ಹಾಕಿದ್ದರು. ಹೀಗೆ, ಸರಕಾರಕ್ಕೆ ಹಾಗೂ ಸಮಾಜಕ್ಕೆ ವಂಚನೆ ಮಾಡಿದ್ದವರ ಜಾತಕ ಬಿಚ್ಚಿಡಲು ಪ್ರಯತ್ನ ಮಾಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಣ್ಯ ವ್ಯಕ್ತಿ, ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕತೆಯ ಪೋಸು ಕೊಟ್ಟು ನಕಲಿ ಜಾತಿ ಪತ್ರದ ಮೂಲಕ ಹುದ್ದೆ ಗಿಟ್ಟಿಸಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿರುವ ನಿವೃತ್ತ ಅಧಿಕಾರಿಗೆ ನೋಟೀಸ್ ನೀಡಿದ ಹತ್ತೇ ದಿನದಲ್ಲಿ ಆ ನೋಟೀಸ್ ಕೊಟ್ಟ ಅಧಿಕಾರಿಯನ್ನೇ ಎತ್ತಂಗಡಿ ಮಾಡಲಾಗಿದೆ ಎಂದು  ಅವರು ಟೀಕಿಸಿದ್ದಾರೆ.

- Advertisement -

ಈ ಸರಕಾರ ಯಾರ ಬಾಲಂಗೋಚಿ ಎನ್ನುವುದು ಈ ವರ್ಗಾವಣೆ ಒಂದರಿಂದಲೇ ಅರ್ಥವಾಗುತ್ತದೆ. ಏಕೆಂದರೆ, ಆರೋಪಿ ಸ್ಥಾನದಲ್ಲಿರುವ ನಿವೃತ್ತ ಅಧಿಕಾರಿ ಕಾಂಗ್ರೆಸ್ ಸರಕಾರದಲ್ಲಿ ಗೃಹ ಇಲಾಖೆ ಸಲಹೆಗಾರರಾಗಿದ್ದರು. 5 ವರ್ಷ ರಾಜ್ಯವನ್ನಾಳಿದ ಮುಖ್ಯಮಂತ್ರಿಗೆ ಆಪ್ತರೂ ಆಗಿದ್ದರು. ಅವರಿಗೆ ನೋಟೀಸ್ ನೀಡಿದಾಕ್ಷಣ ಡಾ.ರವೀಂದ್ರನಾಥ್ʼರನ್ನು ವರ್ಗಾವಣೆ ಮಾಡಲಾಗಿದೆ ಹಾಗಾದರೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಇರುವ ಒಳ ಒಪ್ಪಂದವೇನು? ಒಬ್ಬ ದಲಿತ ಅಧಿಕಾರಿಯನ್ನು ಬಲಿ ಹಾಕಲು ಎರಡೂ ರಾಷ್ಟ್ರೀಯ ಪಕ್ಷಗಳು ನಡೆಸಿದ ಷಡ್ಯಂತ್ರ ಇದಾಗಿದೆ ಎಂದು ಆರೋಪಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರ ನೀಡಿದ ನಾಯಕರ ಆಪ್ತರಾಗಿದ್ದ ನಿವೃತ್ತ ಅಧಿಕಾರಿ ವಿರುದ್ಧ ಕೇಳಿಬಂದಿರುವುದು ಗಂಭೀರ ಆರೋಪ. ಅಂಥ ವ್ಯಕ್ತಿಯನ್ನು ರಕ್ಷಣೆ ಮಾಡುವ ಅಗತ್ಯ ಸರಕಾರಕ್ಕೆ ಏನಿದೆ? ಎಲ್ಲಿಂದ ಯಾರು, ಯಾರ ಮೇಲೆ ಒತ್ತಡ ಹೇರಿದ್ದಾರೆ? ಯಾರು ಯಾರ ಋಣ ಚುಕ್ತಾ ಮಾಡುತ್ತಿದ್ದಾರೆ ಎನ್ನುವುದು ಜನರಿಗೆ ಗೊತ್ತಾಗಬೇಕಿದೆ ಎಂದು ಅವರು ಆಗ್ರಹಪಡಿಸಿದ್ದಾರೆ.



Join Whatsapp