ಪಿಎಸ್ ಐ ನೇಮಕಾತಿ ಅಕ್ರಮ‌ದಲ್ಲಿ ಭಾಗಿಯಾದ ಯಾರನ್ನೂ ಬಿಡುವುದಿಲ್ಲ: ಸಚಿವ ಕೆ.ಗೋಪಾಲಯ್ಯ

Prasthutha|

ಹಾಸನ: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣವನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮುಚ್ಚಿಹಾಕುವುದಿಲ್ಲ. ಮಾತ್ರವಲ್ಲ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಯಾರೇ ಭಾಗಿಯಾಗಿದ್ದರೂ ಅವರಿಗೆ ಕಠಿಣ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದರು.

- Advertisement -


ಈ ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಯಾವುದೇ ವರ್ಗದ ಜನರು ಇದ್ದರೂ ಅವರ ವಿರುದ್ಧ ಕ್ರಮಕ್ಕೆ ಈಗಾಗಲೇ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸೂಚಿಸಿದ್ದಾರೆ. ಸಹಾಯಕ‌ ಪ್ರಾಧ್ಯಾಪಕರ ಹುದ್ದೆ ನೇಮಕಾತಿಯಲ್ಲೂ ನಡೆದಿರುವ ಅಕ್ರಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪ‌ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ‌ ಸಚಿವರು, ಈ ವಿಚಾರ ಮುಖ್ಯಮಂತ್ರಿಗಳ ಗಮನದಲ್ಲೂ ಇದೆ, ಈ ಬಗ್ಗೆ ಅವರೇ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಅವರು ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಹಗರಣದಲ್ಲಿ ಭಾಗಿಯಾಗಿಲ್ಲ. ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಏಳ್ಗೆ ಸಹಿಸದೆ ವಿರೋಧ ಪಕ್ಷಗಳು ಇಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಯಾವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದನ್ನು ನಿರ್ಣಯಿಸುವುದು ಮತದಾರರು ಮಾತ್ರ. ‌ರಾಜಕೀಯ ನಾಯಕರು ಏನೇ ಹೇಳಿದರು ಅಂತಿಮ ತೀರ್ಪು ಮತದಾರನ ಕೈ ಯಲ್ಲಿ ಇರುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ‌ಅವರ ಹೇಳಿಕೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಸಚಿವ ಕೆ.ಗೋಪಾಲಯ್ಯ ಉತ್ತರಿಸಿದರು.



Join Whatsapp