ಅಗರ್ತಲಾ: ತ್ರಿಪುರಾ ಮುಖ್ಯಮಂತ್ರಿ ಹುದ್ದೆಗೆ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ ನೀಡಿದ್ದಾರೆ.
ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಅವರು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ತ್ರಿಪುರಾದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಅವರು ರಾಜೀನಾಮೆ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಇಂದು ಸಂಜೆ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ವೀಕ್ಷಕರನ್ನಾಗಿ ನೇಮಿಸಿದ್ದಾರೆ ಎಂದು ಬಿಜೆಪಿಯ ಮೂಲಗಳಿಂದ ತಿಳಿದು ಬಂದಿವೆ.
ರಾಜ್ಯಪಾಲ ಎಸ್.ಎನ್ ಆರ್ಯ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜಭವನಕ್ಕೆ ತೆರಳಿ ರಾಜ್ಯಪಾಲರೊಂದಿಗೆ ಚರ್ಚಿಸಿದ ಬಳಿಕ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದರು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯ ಘಟಕದಲ್ಲಿ ನಡೆಯುತ್ತಿರುವ ಭಿನ್ನಮತದ ಮಧ್ಯೆಯೇ ಈ ಬೆಳವಣಿಗೆ ನಡೆದಿದೆ.
ಮುಖ್ಯಮಂತ್ರಿ ಹುದ್ದೆಗೆ ರಾಜ್ಯಸಭಾ ಸಂಸದ ಡಾ.ಮಾಣಿಕ್ ಸಹಾ, ಮತ್ತು ಡಿಸಿಎಂ ಜಿಷ್ಣು ದೇವ್ ವರ್ಮಾ ಅವರ ಹೆಸರು ಮುಂಚೂಣಿಯಲ್ಲಿದೆ